ಬಲಿಷ್ಠ ನಾಯಕರನ್ನು ಉಪಚುನಾವಣೆಗೆ ಕಣಕ್ಕೆ ಇಳಿಸಿದ ಜೆಡಿಎಸ್ !! ಜೆಡಿಎಸ್ ಅಭ್ಯರ್ಥಿಗಳ ಫೈನಲ್ ಪಟ್ಟಿ ಹೊರ ಹಾಕಿದ ಕುಮಾರಸ್ವಾಮಿ
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿರುವ ಬೆನ್ನಲ್ಲೇ ಜೆಡಿಎಸ್ ಇಂದು ಅಥವಾ ನಾಳೆ ತನ್ನ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಜಿಲ್ಲಾವಾರು ಹಾಗೂ ಕ್ಷೇತ್ರವಾರು ಸಭೆಗಳನ್ನು ನಡೆಸಿ ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಪಡೆಯಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣ ರಾದ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವುದರಿಂದ ಜೆಡಿಎಸ್ ಈ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು, ಯಾವ್ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಗೆಲ್ಲಲು ಸಾಧ್ಯವಾಗುತ್ತದೆ ಎಂಬ ವಿಚಾರದ ಬಗ್ಗೆ ದೇವೇಗೌಡರ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಹಾಗೂ ಪಕ್ಷದ ಹಿರಿಯ ಮುಖಂಡರು ಸಭೆ ಸೇರಿ ತೀರ್ಮಾನಿಸಲಿದ್ದಾರೆ.
ಉಪಚುನಾವಣೆಯಲ್ಲಿ ಸ್ಥಳೀಯರಿಗೆ ಅವಕಾಶ ಕಲ್ಪಿಸುವುದಾಗಿ ದೇವೇಗೌಡರು ಘೋಷಣೆ ಮಾಡಿದ್ದಾರೆ.
ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಥಳೀಯ ಆಕಾಂಕ್ಷಿಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಒಂದೊಂದು ಕ್ಷೇತ್ರದಲ್ಲೂ ಎರಡು-ಮೂರು ಮಂದಿ ಆಕಾಂಕ್ಷಿಗಳಿದ್ದು, ಜೆಡಿಎಸ್ ಪಕ್ಷದ ವರಿಷ್ಠರು ಹಾಗೂ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರಕ್ಕೆ ಸ್ಫರ್ಧಿಸಲು ಬೆಂಗಳೂರು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್. ಪ್ರಕಾಶ್, ಉಪಮೇಯರ್ ಭದ್ರೇಗೌಡ ಹಾಗೂ ಪಕ್ಷದ ಮುಖಂಡ ಆರ್.ವಿ.ಹರೀಶ್ ಆಕಾಂಕ್ಷಿಗಳಾಗಿದ್ದು, ಕೊನೆ ಘಳಿಗೆಯಲ್ಲಿ ಜೆಡಿಎಸ್ ನಾಯಕರು ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು. ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಮುಖಂಡರಾದ ಶಂಕರ್‍ರೆಡ್ಡಿ, ಡಿ.ಎ.ಗೋಪಾಲ್ ಆಕಾಂಕ್ಷಿಗಳಾಗಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದೆರಡು ಬಾರಿ ಸ್ಪರ್ಧಿಸಿ ಸೋತಿದ್ದ ಜವರಾಯಿಗೌಡ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರ ಒತ್ತಡವಿದೆ.
ಆದರೆ ಜವರಾಯಿಗೌಡರು ಸ್ಪರ್ಧೆ ಮಾಡಲು ಮೀನಾಮೇಷ ಎಣಿಸುತ್ತಿದ್ದಾರೆ. ಈ ನಡುವೆ ಹನು ಮಂತೇಗೌಡ ಅವರು ಕೂಡ ಸ್ಪರ್ಧಿಸುವ ಬಗ್ಗೆ ಆಸಕ್ತಿವಹಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಇದೇ ರೀತಿ ಹೊಸಕೋಟೆ, ಹುಣಸೂರು, ಕೆ.ಆರ್.ಪೇಟೆ ಕ್ಷೇತ್ರಗಳಲ್ಲೂ ಜೆಡಿಎಸ್‍ನಿಂದ ಸ್ಪರ್ಧಿಸಲು ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Comments
Post a Comment