ಈಗಾಗಲೇ ಚುನಾವಣೆಯಲ್ಲಿ ಸೋತಿರುವ ಲಕ್ಷ್ಮಣ ಸವದಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಅದೇ ರೀತಿ ಚುನಾವಣೆಯಲ್ಲಿ ಸೋತಿರುವ ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿದರೆ ಬಿಜೆಪಿಯ ಕೆಲವು ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ. ಅವರಲ್ಲಿ ಕೆಲವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ಉಪ ಚುನಾವಣೆಯಲ್ಲಿ ಪರಾಭವಗೊಂಡ ಇಬ್ಬರಿಗೆ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸದ ಆರ್. ಶಂಕರ್ ಅವರಿಗೆ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿದೆ.
ಆದರೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರೂ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ವಿರೋಧ ವ್ಯಕ್ತವಾಗಿದೆ ಎಂದು ಹೇಳಲಾಗಿದೆ. ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ 17 ಮಂದಿಗೆ ಅವಕಾಶ ನೀಡಲು ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಉಪ ಚುನಾವಣೆಯಲ್ಲಿ ಗೆದ್ದ 11 ಶಾಸಕರಲ್ಲಿ 10 ಮಂದಿಗೆ ಸಚಿವ ಸ್ಥಾನ ನೀಡಲು ಕ್ರಮಕೈಗೊಳ್ಳಲಾಗಿದೆ. ಮೂವರು ಮೂಲ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಆದರೆ ಪರಾಭವಗೊಂಡಿರುವ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮಾತುಗಳು ಕೇಳಿ ಬರುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದ್ದು, ಕೆಲವು ಶಾಸಕರು ರಾಜೀನಾಮೆ ಬೆದರಿಕೆ ಒಡ್ಡಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಸರ್ಕಾರ ರಚನೆಗೆ ಯೋಗೇಶ್ವರ್ ಕೂಡ ಸಾಥ್ ನೀಡಿದ್ದಾರೆ. ಆದರೆ ಅವರು ಚುನಾವಣೆಯಲ್ಲಿ ಪರಾಭವಗೊಂಡಿರುವುದರಿಂದ ಅವರಿಗೆ ಸಚಿವ ಸ್ಥಾನ ನೀಡಬಾರದು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದವರಿಗೆ ಆದ್ಯತೆ ಕೊಡಿ ಎಂದು ಕೆಲವು ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.

Comments
Post a Comment